ಮೈಸೂರು, ಜೂ. 15 (DaijiworldNews/TA): ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಸಮೀಪವಿರುವ ಪಬ್ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನಗೊಂಡಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಪಬ್ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್ ಹಾಗೂ ಪ್ರಕಾಶ್ ಎಂದು ಗುರುತಿಸಲಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಿಬ್ಬಂದಿ ಹಾಗೂ ಗ್ರಾಹಕರು ಹೊರಬರಲು ಹರಸಾಹಸಪಟ್ಟರು. ಅವಘಡದಲ್ಲಿ ಗಾಯಗೊಂಡ ಏಳು ಮಂದಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸಂಬಂಧಿತ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.