ಚೆನ್ನೈ, ಜೂ. 16 (DaijiworldNews/TA): ತಮಿಳುನಾಡು ರಾಜಕೀಯದಲ್ಲಿ ಹೊಸ ಬೆಳವಣಿಗೆಗಳು ಚರ್ಚೆಗೆ ಗ್ರಾಸವಾಗಿವೆ. ವಿಜಯ್ ನೇತೃತ್ವದ ಟಿವಿಕೆ ಪಕ್ಷವು ರಾಜ್ಯದಲ್ಲಿ ಸರ್ಕಾರ ರಚಿಸಿದ ಬಳಿಕ ಕಾಂಗ್ರೆಸ್ ಪಕ್ಷವು ಡಿಎಂಕೆ ಮೈತ್ರಿಯಿಂದ ಹೊರಬಂದು ಟಿವಿಕೆ ಸರ್ಕಾರವನ್ನು ಬೆಂಬಲಿಸಿರುವುದು ಡಿಎಂಕೆ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಡಿಎಂಕೆ ಮೈತ್ರಿಕೂಟದ ಭಾಗವಾಗಿ ಐದು ಸ್ಥಾನಗಳಲ್ಲಿ ಜಯಗಳಿಸಿತ್ತು. ಆದರೆ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ಪಕ್ಷವು ಡಿಎಂಕೆಯನ್ನು ತೊರೆದು ಟಿವಿಕೆ ಜೊತೆ ಕೈಜೋಡಿಸಿ ಸರ್ಕಾರ ರಚನೆಗೆ ಬೆಂಬಲ ನೀಡಿದೆ ಎನ್ನಲಾಗಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿರುವ ಡಿಎಂಕೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ನಿಲುವುಗಳನ್ನು ಪ್ರಶ್ನಿಸಿದೆ. ಡಿಎಂಕೆಯ ಐಟಿ ವಿಭಾಗವು ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್ ಗಾಂಧಿಯನ್ನು ಟೀಕಿಸಿ, ಅವರ ರಾಜಕೀಯ ನಡೆ ವಿರೋಧ ಪಕ್ಷಗಳ ಏಕತೆಯ ಮಾತಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದೆ.
ಡಿಎಂಕೆ ವಲಯದ ನಾಯಕರು, “ಕಷ್ಟದ ಸಮಯದಲ್ಲಿ ಕಾಂಗ್ರೆಸ್ ಪಕ್ಷವನ್ನು ನಾವು ಬೆಂಬಲಿಸಿ ರಾಜಕೀಯವಾಗಿ ಬಲ ನೀಡಿದ್ದೇವೆ. ಆದರೆ ಅವಕಾಶ ಸಿಕ್ಕ ತಕ್ಷಣ ಅವರು ನಮ್ಮನ್ನು ಬಿಟ್ಟು ಬೇರೆ ಪಕ್ಷದೊಂದಿಗೆ ಸೇರಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿಎಂಕೆಯ ಅಧಿಕೃತ ಮುಖಪತ್ರ ‘ಮುರಸೋಲಿ’ಯ ಸಂಪಾದಕೀಯದಲ್ಲಿಯೂ ಕಾಂಗ್ರೆಸ್ ವಿರುದ್ಧ ಟೀಕೆ ವ್ಯಕ್ತವಾಗಿದೆ. ರಾಹುಲ್ ಗಾಂಧಿ ದೇಶದಾದ್ಯಂತ ವಿರೋಧ ಪಕ್ಷಗಳ ಒಗ್ಗಟ್ಟಿನ ಕುರಿತು ಮಾತನಾಡುತ್ತಾರಾದರೂ, ರಾಜ್ಯ ಮಟ್ಟದಲ್ಲಿ ಅದೇ ಒಗ್ಗಟ್ಟಿಗೆ ಧಕ್ಕೆ ತರುವ ರೀತಿಯಲ್ಲಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ ಎಂದು ಲೇಖನದಲ್ಲಿ ಆರೋಪಿಸಲಾಗಿದೆ.
ಇನ್ನೊಂದೆಡೆ, ಈ ಬೆಳವಣಿಗೆಗಳ ಕುರಿತು ಕಾಂಗ್ರೆಸ್ ಪಕ್ಷವು ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಆದರೆ ಪಕ್ಷದ ಮೂಲಗಳ ಪ್ರಕಾರ, ತಮಿಳುನಾಡಿನ ಜನರ ತೀರ್ಪು ಮತ್ತು ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡೇ ನಿರ್ಧಾರ ಕೈಗೊಳ್ಳಲಾಗಿದೆ. ಡಿಎಂಕೆ ಅಥವಾ ಇಂಡಿಯಾ ಮೈತ್ರಿಕೂಟವನ್ನು ದುರ್ಬಲಗೊಳಿಸುವ ಉದ್ದೇಶ ಪಕ್ಷಕ್ಕಿಲ್ಲ ಎಂದು ಕಾಂಗ್ರೆಸ್ ವಲಯಗಳು ಸ್ಪಷ್ಟಪಡಿಸಿವೆ. ತಮಿಳುನಾಡಿನ ರಾಜಕೀಯದಲ್ಲಿ ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ಹೊಸ ಮೈತ್ರಿ ಸಮೀಕರಣಗಳಿಗೆ ಕಾರಣವಾಗುವ ಸಾಧ್ಯತೆ ಇದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.