ಶಿಮ್ಲಾ, ಜೂ. 18 (DaijiworldNews/AK): ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.

ಬುಧವಾರ ಮಧ್ಯರಾತ್ರಿ 2 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಕುತೇಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಲ್ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ಕಾಕ್ರೋಧಾ ಗ್ರಾಮದಲ್ಲಿ ನಡೆದ ಸಮಾರಂಭ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ.
ಅಪಘಾತದ ತೀವ್ರತೆಗೆ ಬೊಲೆರೊ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿ ಒಟ್ಟು ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಜಿಲ್ಲಾಡಳಿತ ಅಧಿಕಾರಿಗಳು ಮತ್ತು ಸ್ಥಳೀಯ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದರು. ಆದರೆ, ದಟ್ಟ ಕತ್ತಲೆ ಮತ್ತು ಕಡಿದಾದ ಗುಡ್ಡಗಾಡು ಪ್ರದೇಶವಾಗಿದ್ದರಿಂದ ಕಂದಕಕ್ಕೆ ಇಳಿದು ಮೃತದೇಹಗಳನ್ನು ಹೊರತೆಗೆಯಲು ರಕ್ಷಣಾ ತಂಡಗಳು ಹರಸಾಹಸ ಪಡಬೇಕಿತ್ತು.
ಅಪಘಾತ ನಡೆದ ರಸ್ತೆಯಲ್ಲಿ ಸುರಕ್ಷತಾ ತಡೆಗೋಡೆಗಳು ಇಲ್ಲದಿರುವುದೇ ಈ ಭೀಕರ ದುರಂತಕ್ಕೆ ಕಾರಣ ಎಂದು ಸ್ಥಳೀಯ ನಿವಾಸಿಗಳು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.