ಬೆಂಗಳೂರು, ಸೆ.04(Daijiworld News/SS): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 4 ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಬಂಧಿಸಲಾಗಿದೆ. ಇದೀಗ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಬಂಧನವನ್ನು ವಿರೋಧಿಸಿ ಬುಧವಾರ ರಾಜ್ಯವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ.
ಡಿಕೆ ಶಿವಕುಮಾರ್ ಅವರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಸೈದ್ದಾಂತಿಕ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ. ಬುಧವಾರ ಪಕ್ಷದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ರಾಜಕೀಯ ದುರುದ್ದೇಶದಿಂದ ಡಿಕೆ ಶಿವಕುಮಾರ್ ಅವರನ್ನು ಬಂಧಿಸಲಾಗಿದೆ. ದ್ವೇಷದ ಕುತಂತ್ರದ ರಾಜಕಾರಣ ಮಾಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಮುಗಿಸುವ ಹೀನ ಕೃತ್ಯಕ್ಕಿಳಿದಿದೆ ಎಂದು ಆರೋಪಿಸಿದರು.