ನವದೆಹಲಿ,ಸೆ 04 (Daijiworld News/RD):ನೋಟು ರದ್ದತಿ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಾಲ್ಕು ದಿನಗಳ ಇಡಿ ವಿಚಾರಣೆ ಬಳಿಕ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಬಂಧಿಸಿದ್ದು, ಇಂದು ದೆಹಲಿಯ ಆರ್ ಎಂಎಲ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ದಾಖಲಿಸಿದ್ದಾರೆ.
ಡಿಕೆ ಶಿವಕುಮಾರ್ ಅವರನ್ನು ದೆಹಲಿಯ ಆರ್ ಎಂಎಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಹೈಶುಗರ್ ಮತ್ತು ಲೋ ಬಿಪಿಯಿಂದ ಬಳಲುತ್ತಿರುವ ಡಿ.ಕೆ.ಶಿವಕುಮಾರ್ ಅವರ ರಕ್ತಪರೀಕ್ಷೆಯನ್ನು ವೈದ್ಯಾಧಿಕಾರಿಗಳು ನಡೆಸಿದ್ದಾರೆ. ಎಲ್ಲಾ ವೈದ್ಯಕೀಯ ಪರೀಕ್ಷೆಗಳ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನು ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಎಲ್ಲಾ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಆರೋಗ್ಯ ಸ್ಥಿರವಾಗಿದ್ದಲ್ಲಿ ಇಡಿ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ.
ದೇಶದಲ್ಲಿ ನೋಟು ರದ್ದತಿ ಸಂದರ್ಭದಲ್ಲಿ ಡಿಕೆಶಿಯವರ ದೆಹಲಿಯ ಫ್ಲಾಟ್ ನಲ್ಲಿ 8.59 ಕೋಟಿ ಹಣ ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಶುಕ್ರವಾರದಿಂದಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಆದರೆ ಇಂದು, ತನಿಖೆಗೆ ಸಹಕರಿಸದಿರುವ ಆರೋಪದ ಮೇರೆಗೆ ಅವರನ್ನು ಬಂಧಿಸಲಾಗಿದೆ.
ಇನ್ನು ರಾಜ್ಯದ ಪ್ರಭಾವಿ ನಾಯಕನೊಬ್ಬನನ್ನು ಬಂಧಿಸುವ ಮೂಲಕ ಅವರ ಆತ್ಮ ವಿಶ್ವಾಸ ಕುಗ್ಗಿಸುವ ಕೆಲಸವನ್ನು ಇಡಿ ಸಂಸ್ಥೆ ಮಾಡುತ್ತಿದೆ ಎಂದು ಆರೋಪಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಡಿ ಅಧಿಕಾರಿಗಳ ಕಾರು ತಡೆದು ಪ್ರತಿಭಟನೆ ನಡೆಸಿದ ಘಟನೆ ಕೂಡ ನಡೆದಿದೆ.