ಬೆಂಗಳೂರು,ಸೆ 05 (Daijiworld News/RD): ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಗುರುವಾರ ಸಮನ್ಸ್ ಜಾರಿಗೊಳಿಸಿದೆ.
2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲಗೆ ವಡೇರಹಳ್ಳಿಯ 2 ಎಕರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ 2012ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು. ಬನಶಂಕರಿ ಐದನೇ ಹಂತದಲ್ಲಿರುವ ಹಲಗೆ ವಡೇರಹಳ್ಳಿಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಚಾಮರಾಜನಗರದ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವವರು ದೂರು ಸಲ್ಲಿಸಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2019ರ ಆರಂಭದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಆ ಮೂಲಕ ಕುಮಾರಸ್ವಾಮಿ ಅವರಿಗೆ ರಿಲೀಫ್ ಸಿಕ್ಕಿತ್ತು. ಆದರೆ ಮಹದೇವಸ್ವಾಮಿ ಬಿ ರಿಪೋರ್ಟ್ ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. 2012ರಲ್ಲಿ ಪ್ರಕರಣ ದಾಖಲಾಗಿದ್ದರೂ ಕ್ರಮ ಕೈಗೊಳ್ಳದೇ, ಈಗ ಇದ್ದಕ್ಕಿದ್ದಂತೆ ಬಿ ರಿಪೋರ್ಟ್ ಸಲ್ಲಿಸಿರುವ ಬಗ್ಗೆ ನ್ಯಾಯಾಧೀಶರು ಸಿಟ್ಟಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಆದೇಶಿಸಿದ್ದರು. ಇದೀಗ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ಡಿಕೆಶಿ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಕುಮಾರಸ್ವಾಮಿಗೂ ಕೂಡ ಕಂಟಕ ಬಂದಿದೆ.