ಚಿಕ್ಕಮಗಳೂರು, ಜು. 07 (DaijiworldNews/TA): ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯೊಂದಿಗೆ ದಟ್ಟ ಮಂಜು ಆವರಿಸಿದೆ. ಪ್ರತಿಕೂಲ ಹವಾಮಾನದಿಂದಾಗಿ ವಾಹನ ಸವಾರರು ಸಂಚಾರ ನಡೆಸಲು ಪರದಾಡುವಂತಾಗಿದೆ.

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-173ರ ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಗೋಚರತೆ ಗಣನೀಯವಾಗಿ ಕುಸಿದಿದೆ. ದಟ್ಟ ಮಂಜು ಮತ್ತು ನಿರಂತರ ಮಳೆಯ ಪರಿಣಾಮ ಎದುರಿನಿಂದ ಬರುವ ವಾಹನಗಳು ಸ್ಪಷ್ಟವಾಗಿ ಕಾಣಿಸದೇ ಚಾಲಕರು ನಿಧಾನಗತಿಯಲ್ಲಿ ವಾಹನ ಚಲಾಯಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ರಸ್ತೆ ಬದಿಗಳಲ್ಲಿ ಹಲವು ತಾತ್ಕಾಲಿಕ ಜಲಪಾತಗಳು ಧುಮ್ಮಿಕ್ಕುತ್ತಿದ್ದು, ಪ್ರಕೃತಿಯ ಮನಮೋಹಕ ದೃಶ್ಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ, ಇದೇ ವೇಳೆ ರಸ್ತೆ ಜಾರುವ ಸಾಧ್ಯತೆ ಹಾಗೂ ಕಡಿಮೆ ಗೋಚರತೆಯಿಂದ ಅಪಘಾತದ ಅಪಾಯವೂ ಹೆಚ್ಚಿರುವುದರಿಂದ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಹವಾಮಾನ ಇಲಾಖೆ ಇನ್ನೂ ಕೆಲವು ದಿನಗಳ ಕಾಲ ಈ ಭಾಗದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ಸೂಚಿಸಲಾಗಿದೆ.