ಬೆಂಗಳೂರು, ಜು. 07 (DaijiworldNews/AA): ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ಬುಧವಾರ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಸತತ ಮಳೆಯಿಂದಾಗಿ ಕರಾವಳಿ ಮತ್ತು ಮಲೆನಾಡಿನ ನದಿಗಳು, ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಹೀಗಾಗಿ ಮಳೆಯ ತೀವ್ರತೆ ಹೆಚ್ಚಿರುವ ತಾಲ್ಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಸಾರ್ವಜನಿಕರು ಅನಗತ್ಯವಾಗಿ ನದಿ, ಹಳ್ಳ ಹಾಗೂ ಜಲಪಾತಗಳ ಬಳಿ ತೆರಳಬಾರದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಗೆ ಜಿಲ್ಲಾಡಳಿತದ ಸಹಾಯವಾಣಿಯನ್ನು ಸಂಪರ್ಕಿಸಲು ಕೋರಲಾಗಿದೆ.