ಬೆಂಗಳೂರು, ಸೆ 09 (DaijiworldNews/SM): ಈ ಹಿಂದೆ ನಡೆದಂತಹ ಲೋಕಸಭೆ ಚುನಾವಣೆಯಲ್ಲಿ ಇವಿಎಂ ಯಂತ್ರ ದುರುಪಯೋಗ ಪಡಿಸಿರುವ ಬಗ್ಗೆ ಅನುಮಾನವಿದೆ. ಇದರ ವಿರುದ್ಧ ರಾಜಕೀಯ ಪಕ್ಷಗಳು ಒಂದಾಗಬೇಕಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿನಂತಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪ್ರಮುಖ ರಾಷ್ಟ್ರಗಳಲ್ಲಿ ಇವಿಎಂ ಯಂತ್ರ ತಿರಸ್ಕರಿಸಲಾಗಿದೆ. ಅಮೇರಿಕಾ, ಯುರೋಪ್, ರಷ್ಯಾಗಳಲ್ಲಿ ಇವಿಎಂ ಯಂತ್ರಗಳನ್ನು ಬಿಟ್ಟು ಹಳೇ ಪದ್ಧತಿಗೆ ಮುಂದಾಗಿವೆ. ಇವಿಎಂ ಯಂತ್ರದ ಬ್ಯಾಲೆಟ್ ಪೇಪರ್ ಬಳಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೆ, ಬ್ಯಾಲೇಟ್ ಪೇಪರ್ ಮೂಲಕವೇ ಚುನಾವಣೆ ನಡೆಸುವ ಪದ್ಧತಿಯನ್ನು ಜಾರಿಗೆ ತರುತ್ತಿದ್ದೆವು ಎಂದರು.
ದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೇ ರಾಷ್ಟ್ರೀಯ ಪಕ್ಷಗಳಿವೆ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ಮುಗಿಸಿದರೆ ಎಲ್ಲವನ್ನು ಮುಗಿಸಿದಂತಾಗುತ್ತದೆ ಎಂಬ ಭಾವನೆಯಲ್ಲಿ ಬಿಜೆಪಿ ಪಕ್ಷದ ಹಿರಿಯರು ಕನಸು ಕಾಣುತ್ತಿದ್ದಾರೆ ಎಂದರು. ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು.