ಬೆಂಗಳೂರು, ಜು. 31 (DaijiworldNews/AA): ಮುಂದಿನ ಮೂರು ದಿನ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಇನ್ನೂ ಕೊಡಗು, ಹಾಸನ, ಧಾರವಾಡ, ಗದಗ, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಇಲಾಖೆ ಸೂಚನೆ ನೀಡಿದೆ.