ಕೊಚ್ಚಿ, ಆ. 01 (DaijiworldNews/TA): ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಹಾಗೂ ಭೂಕುಸಿತದ ಘಟನೆಗಳು ಜನಜೀವನವನ್ನು ಅಸ್ತವ್ಯಸ್ತಗೊಳಿಸಿವೆ. ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಭೂಕುಸಿತಗಳಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಇಡುಕ್ಕಿ ಜಿಲ್ಲೆಯ ಕೂಡಯತ್ತೂರು ಸಮೀಪದ ಆದೂರ್ಮಲ ಪ್ರದೇಶದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೂಕುಸಿತದಲ್ಲಿ ಸುಮತಿ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಭೂಕುಸಿತದ ವೇಳೆ ಮಣ್ಣು ಮತ್ತು ಬಂಡೆಗಳು ಅವರ ಮನೆಯ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯ ವೇಳೆ ಮನೆಯಲ್ಲಿದ್ದ ಸುಮತಿ ಅವರ ಪತಿ ಹಾಗೂ ಪುತ್ರನನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದು, ಇಬ್ಬರೂ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ತೊಡುಪುಳದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೊಂದೆಡೆ, ಕೊಟ್ಟಾಯಂ ಜಿಲ್ಲೆಯಲ್ಲಿಯೂ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಮಣ್ಣಿನಡಿ ಸಿಲುಕಿರುವವರನ್ನು ಪತ್ತೆಹಚ್ಚಲು ಅಗ್ನಿಶಾಮಕ ದಳ, ಪೊಲೀಸರು ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ, ನದಿಪಾತ್ರ ಹಾಗೂ ಗುಡ್ಡಗಾಡು ಪ್ರದೇಶಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.