ಪಣಜಿ, ಆ. 06 (DaijiworldNews/TA): ತೆಹಲ್ಕಾ ನಿಯತಕಾಲಿಕೆಯ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ಪಾಲ್ ವಿರುದ್ಧದ 2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ನ ಗೋವಾ ಪೀಠ ಮಹತ್ವದ ತೀರ್ಪು ನೀಡಿದೆ. 2021ರಲ್ಲಿ ಗೋವಾ ಸೆಷನ್ಸ್ ನ್ಯಾಯಾಲಯ ನೀಡಿದ್ದ ಖುಲಾಸೆ ಆದೇಶವನ್ನು ರದ್ದುಗೊಳಿಸಿರುವ ಹೈಕೋರ್ಟ್, ತೇಜ್ಪಾಲ್ ಅವರನ್ನು ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿದೆ.

ನ್ಯಾಯಮೂರ್ತಿ ನೀಲಾ ಗೋಖಲೆ ಹಾಗೂ ನ್ಯಾಯಮೂರ್ತಿ ಅಮಿತ್ ಜಮ್ಸಂದೇಕರ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ಪ್ರತ್ಯೇಕವಾಗಿ ಪ್ರಕಟಿಸುವ ಸಾಧ್ಯತೆಯಿದೆ. ತೇಜ್ಪಾಲ್ ಪರ ಹಿರಿಯ ವಕೀಲ ಅಬಾದ್ ಪೋಂಡಾ ವಾದ ಮಂಡಿಸಿ, ಆರೋಪಿಗೆ ಈಗ 62 ವರ್ಷ ವಯಸ್ಸಾಗಿದ್ದು, ಇದು ಅವರ ಮೊದಲ ಅಪರಾಧವಾಗಿದೆ. ಈಗಾಗಲೇ ಸುಮಾರು ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಿರುವುದರಿಂದ ಕನಿಷ್ಠ ಶಿಕ್ಷೆ ವಿಧಿಸುವ ಮೂಲಕ ನ್ಯಾಯಾಲಯ ಸೌಮ್ಯತೆ ತೋರಬೇಕು ಎಂದು ಮನವಿ ಮಾಡಿದರು. ಇದೇ ವೇಳೆ, ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ಅವರು ನ್ಯಾಯಾಲಯಕ್ಕೆ ತಿಳಿಸಿದರು.
ಸ್ವತಃ ನ್ಯಾಯಾಲಯವನ್ನು ಉದ್ದೇಶಿಸಿ ಮಾತನಾಡಿದ ತರುಣ್ ತೇಜ್ಪಾಲ್, "ಕಳೆದ 30 ವರ್ಷಗಳಿಂದ ನಾವು ಸತ್ಯವನ್ನು ಬಹಿರಂಗಪಡಿಸುವ ಕೆಲಸ ಮಾಡಿದ್ದೇವೆ. ನಾನು ಇಬ್ಬರು ಹೆಣ್ಣುಮಕ್ಕಳ ತಂದೆ. ಈ ತೀರ್ಪಿನ ವಿರುದ್ಧ ನಾವು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ," ಎಂದು ಹೇಳಿದರು. ಕೇಂದ್ರ ಮತ್ತು ಗೋವಾ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಆರೋಪಿಯ ವರ್ತನೆಯಲ್ಲಿ ಯಾವುದೇ ಪಶ್ಚಾತ್ತಾಪ ಕಾಣುತ್ತಿಲ್ಲ. ಇಂತಹ ಪ್ರಕರಣದಲ್ಲಿ ಯಾವುದೇ ವಿನಾಯಿತಿ ನೀಡಬಾರದು ಎಂದು ನ್ಯಾಯಾಲಯದ ಮುಂದೆ ವಾದಿಸಿದರು.
ಪ್ರಕರಣದ ಹಿನ್ನೆಲೆ : 2013ರ ನವೆಂಬರ್ನಲ್ಲಿ ಗೋವಾದ ಪಂಚತಾರಾ ಹೋಟೆಲ್ನಲ್ಲಿ ನಡೆದ ಥಿಂಕ್ ಫೆಸ್ಟ್ ಕಾರ್ಯಕ್ರಮದ ವೇಳೆ, ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವ ಪತ್ರಕರ್ತೆಯ ಮೇಲೆ ಹೋಟೆಲ್ನ ಲಿಫ್ಟ್ನಲ್ಲಿ ತರುಣ್ ತೇಜ್ಪಾಲ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಗೋವಾ ಸೆಷನ್ಸ್ ನ್ಯಾಯಾಲಯವು 2021ರಲ್ಲಿ ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ತೇಜ್ಪಾಲ್ ಅವರನ್ನು ಖುಲಾಸೆಗೊಳಿಸಿತ್ತು. ಆದರೆ, ಈ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಬಾಂಬೆ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ : ಹೈಕೋರ್ಟ್ ದೋಷಿ ಎಂದು ಘೋಷಿಸಿದ ಬೆನ್ನಲ್ಲೇ ತೇಜ್ಪಾಲ್ ಪರ ವಕೀಲರು ಶಿಕ್ಷೆಯ ಪ್ರಮಾಣ ಪ್ರಕಟವಾದ ತಕ್ಷಣ ಸುಪ್ರೀಂ ಕೋರ್ಟ್ನಲ್ಲಿ ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ಪ್ರಕರಣವು 2012ರ ನಿರ್ಭಯಾ ಘಟನೆಯ ಬಳಿಕ ಜಾರಿಗೆ ಬಂದ ಕ್ರಿಮಿನಲ್ ಲಾ (ತಿದ್ದುಪಡಿ) ಕಾಯ್ದೆ–2013ರ ಅಡಿಯಲ್ಲಿ ತನಿಖೆಗೊಳಗಾದ ದೇಶದ ಮೊದಲ ಪ್ರಮುಖ ಉನ್ನತ ಮಟ್ಟದ ಲೈಂಗಿಕ ಅಪರಾಧ ಪ್ರಕರಣಗಳಲ್ಲಿ ಒಂದಾಗಿ ಪರಿಗಣಿಸಲಾಗಿದೆ.