ನವದೆಹಲಿ, ಆ. 11 (DaijiworldNews/TA): 80ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಕರೆ ನೀಡಿದ್ದಾರೆ. ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಂಡು, ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಹಬ್ಬದಂತೆ ಆಚರಿಸಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ವಿಡಿಯೋ ಸಂದೇಶ ಹಂಚಿಕೊಂಡಿದ್ದು, ದೇಶದ ಜನರು ಹೆಮ್ಮೆ ಮತ್ತು ಗೌರವದಿಂದ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಕರೆ ನೀಡಿದ್ದಾರೆ.

ವೀಡಿಯೋ ಸಂದೇಶದಲ್ಲಿ ಪ್ರಧಾನಿ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ, ಅವರಿಗೆ ಗೌರವ ಸಲ್ಲಿಸುವಂತೆ ಜನತೆಗೆ ಮನವಿ ಮಾಡಿದ್ದಾರೆ. “ಆಗಸ್ಟ್ 15ರಂದು ಹೆಮ್ಮೆ ಮತ್ತು ಗೌರವದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸೋಣ. ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸೋಣ. ವಿಕಸಿತ ಭಾರತ ನಿರ್ಮಾಣಕ್ಕೆ ಪ್ರತಿಜ್ಞೆ ಮಾಡೋಣ. ಹರ್ ಘರ್ ತಿರಂಗಾ, ಘರ್ ಘರ್ ತಿರಂಗಾ, ಹರ್ ಮನ್ ತಿರಂಗಾ” ಎಂದು ಪ್ರಧಾನಿ ಸಂದೇಶ ನೀಡಿದ್ದಾರೆ. ಪ್ರತಿಯೊಂದು ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶದ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗಿಯಾಗುವಂತೆ ಅವರು ಕರೆ ನೀಡಿದ್ದಾರೆ.
2026ರ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಆಗಸ್ಟ್ ತಿಂಗಳಲ್ಲಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಈ ಅಭಿಯಾನದ ಮೂಲಕ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರೀಯ ಸಂಭ್ರಮದಲ್ಲಿ ಭಾಗಿಯಾಗುವಂತೆ ಪ್ರೋತ್ಸಾಹಿಸಲಾಗುತ್ತಿದೆ. ಮನೆಗಳು ಮಾತ್ರವಲ್ಲದೆ ಸಾರ್ವಜನಿಕ ಸ್ಥಳಗಳಲ್ಲೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟ, ಸಾಧನೆ ಮತ್ತು ಪಯಣವನ್ನು ಸ್ಮರಿಸಲು ಜನರನ್ನು ಪ್ರೇರೇಪಿಸಲಾಗುತ್ತಿದೆ.
‘ಹರ್ ಘರ್ ತಿರಂಗಾ’ ಅಭಿಯಾನದ ಪ್ರಮುಖ ಉದ್ದೇಶ ರಾಷ್ಟ್ರಧ್ವಜದೊಂದಿಗೆ ಪ್ರತಿಯೊಬ್ಬ ಭಾರತೀಯನ ವೈಯಕ್ತಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರತಿಯೊಂದು ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಸಂದೇಶವನ್ನು ಸಾರುವ ಉದ್ದೇಶವನ್ನು ಅಭಿಯಾನ ಹೊಂದಿದೆ. ಈ ಸ್ವಾತಂತ್ರ್ಯೋತ್ಸವದಲ್ಲಿ ಪ್ರತಿಮನೆಯಲ್ಲೂ ತ್ರಿವರ್ಣ ಧ್ವಜ, ಪ್ರತಿಯೊಂದು ಹೃದಯದಲ್ಲೂ ದೇಶಭಕ್ತಿ ಎಂಬ ಸಂದೇಶದೊಂದಿಗೆ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.