ಚಿಕ್ಕಬಳ್ಳಾಪುರ, ಆ. 15 (DaijiworldNews/AK): ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಬಸ್ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣ ಸುಟ್ಟುಹೋದ ಘಟನೆ ಚಿಕ್ಕಬಳ್ಳಾಪುರಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಂ.ಗೊಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.

ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗೌರಿಬಿದನೂರು ಕೆಎಸ್ಆರ್ಟಿಸಿ ಘಟಕಕ್ಕೆ ಸೇರಿದ ಬಸ್ ನಗರದಿಂದ ಮರಿಪಡಿಗು ಗ್ರಾಮದತ್ತ ತೆರಳುತ್ತಿತ್ತು. ಎಂ.ಗೊಲ್ಲಹಳ್ಳಿ ಗ್ರಾಮದ ಸಮೀಪ ಬರುತ್ತಿದ್ದ ವೇಳೆ ಬಸ್ನಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ತಕ್ಷಣ ಬಸ್ ಅನ್ನು ಸುರಕ್ಷಿತವಾಗಿ ನಿಲ್ಲಿಸಿ, ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.
ಬಸ್ನಲ್ಲಿದ್ದ ಎಲ್ಲ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ನೋಡನೋಡುತ್ತಿದ್ದಂತೆ ಬೆಂಕಿ ಬಸ್ನ ವಿವಿಧ ಭಾಗಗಳಿಗೆ ವ್ಯಾಪಿಸಿದ್ದು, ಬಸ್ನ ಬಹುತೇಕ ಭಾಗ ಸಂಪೂರ್ಣವಾಗಿ ಸುಟ್ಟುಹೋಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.