ಬೆಂಗಳೂರು, ಸೆ 14 (Daijiworld News/RD): ದೇಶಾದ್ಯಂತ ಇಂದು ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಿಸುತ್ತಿದೆ. ದೇಶದಲ್ಲಿರುವ ಅಧಿಕೃತ ಭಾಷೆಗಳಲ್ಲಿ ಕನ್ನಡವೂ ಕೂಡ ಒಂದು. ಹಾಗಾಗಿ ಕನ್ನಡ ಭಾಷಾ ದಿನವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ಮೋದಿಯವರೇ ಎಂಬ ಪ್ರಶ್ನೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಇಂದು ದೇಶದಾದ್ಯಂತ ಕೇಂದ್ರ ಸರ್ಕಾರ 'ಹಿಂದಿ ದಿವಸ್' ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ಮೋದಿಯವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ'' ಎಂದು ಹೇಳಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ ಎಂದು ಕೆಂದ್ರ ಸರ್ಕಾರದ ವಿರುದ್ಧ ಗರಂ ಆದ ಹೆಚ್ ಡಿಕೆ, ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಮುಂಚೆ ಇದ್ದ domicile ನಿಯಮವನ್ನು ವಾಪಾಸ್ ತರಲಾಗಿಲ್ಲ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.