ಹೊಸದಿಲ್ಲಿ, ಸೆ 16 (Daijiworld News/RD): ಜಮ್ಮು ಮತ್ತು ಕಾಶ್ಮೀರ ಶೀಘ್ರವೇ ಸಹಜ ಸ್ಥಿತಿಯತ್ತ ಮರಳಲು ಕೇಂದ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಸೂಚನೆ ನೀಡಿದೆ.
ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಅಗತ್ಯ ಕ್ರಮವಹಿಸಿ. ಜಮ್ಮು ಕಾಶ್ಮೀರ ಸಹಜ ಸ್ಥಿತಿಯತ್ತ ಮರಳಲು ಎಲ್ಲಾ ಪ್ರಯತ್ನ ನಡೆಸುವಂತೆ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ಹೇಳಿದೆ.
ಜಮ್ಮು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ಕೇಂದ್ರ ಸರ್ಕಾರ, ಕೆಲವೊಂದು ನಿರ್ಬಂಧ ವಿಧಿಸಿತ್ತು. ಆ ಬಳಿಕ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೊರ್ಟ್ಗೆ ತಿಳಿಸಿದೆ.
ಕಾಶ್ಮೀರದಲ್ಲಿ ಸಾಮಾನ್ಯ ಸ್ಥಿತಿ ಮರುಸ್ಥಾಪನೆಗೆ ಕೈಗೊಂಡ ಕ್ರಮಗಳ ಬಗ್ಗೆ ಪ್ರಮಾಣಪತ್ರದಲ್ಲಿ ವಿವರಿಸಬೇಕೆಂದೂ ಕೋರ್ಟ್ ಕೇಂದ್ರಕ್ಕೆ ಸೂಚನೆ ನೀಡಿದ್ದು ಅಗತ್ಯವಿದ್ದಲ್ಲಿ ಖುದ್ದಾಗಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುವುದಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಹೇಳಿದ್ದಾರೆ.