ನವದೆಹಲಿ, ಸೆ 19 (Daijiworld News/RD): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿದೇರ್ಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮಾಜಿ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ತಿಹಾರ್ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಅನಾರೋಗ್ಯದಿಂದ ಆರ್ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ವೈದ್ಯರು ಫಿಟ್ನೆಸ್ ವರದಿ ನೀಡಿದ್ದು, ದೆಹಲಿ ಪೊಲೀಸರು ಡಿಕೆಶಿಯನ್ನು ತಿಹಾರ್ ಜೈಲಿಗೆ ಕರೆದೊಯ್ದಿದ್ದಾರೆ.
ಈಗಾಗಲೇ ಐಎನ್ ಎಕ್ಸ್ ಮೀಡಿಯ ಹಗರಣದಲ್ಲಿ ಇ.ಡಿಯಿಂದ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರನ್ನು ಇರಿಸಲಾಗಿರುವ ಸೆಲ್ ನ ಪಕ್ಕದಲ್ಲಿ ಡಿಕೆಶಿಯನ್ನು ಇರಿಸಲಾಗುತ್ತದೆ ಎಂದು ತಿಳಿದುಬಂದಿದೆ.
2017ರಲ್ಲಿ ಡಿಕೆ ಶಿವಕುಮಾರ್ ಅವರ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಡಿಕೆಶಿ ಮತ್ತು ಆಪ್ತರಿಗೆ ಸೇರಿದ್ದ ಒಟ್ಟು 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ವೇಳೆ ದೆಹಲಿಯ ಡಿಕೆಶಿ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ 8.59 ಕೋಟಿ ರೂ. ನಗದು ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡಿದ್ದ ಜಾರಿ ನಿರ್ದೇಶನಾಲಯ ಕಳೆದ ತಿಂಗಳು ಡಿಕೆಶಿ ಅವರನ್ನು ವಿಚಾರಣೆ ನಡೆಸಿ ಬಳಿಕ ಬಂಧಿಸಿತ್ತು.