ಬೆಂಗಳೂರು, ಸೆ 27 (Daijiworld News/RD): ರಾಜ್ಯದ ಎಲ್ಲಾ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಧರ್ಮದರ್ಶಿ ವ್ಯವಸ್ಥಾಪನಾ ಸಮಿತಿಗಳನ್ನು ರದ್ದುಪಡಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕ ಮಾಡಲಾದ ಎಲ್ಲ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಸದಸ್ಯರ ನಾಮನಿರ್ದೇಶನ ಮತ್ತು ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ದೇಗುಲಗಳ ಆಡಳಿತವನ್ನು ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಕೂಡಲೇ ವಹಿಸಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದ್ದು, ಅಲ್ಲದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿ.ರಶ್ಮಿ ಅವರನ್ನು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.