ಬೆಂಗಳೂರು, ಅ 1 (Daijiworld News/RD): ನಗರದ ಹೊರವಲಯದಲ್ಲಿನ ಬೊಮ್ಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಜಮೀನನ್ನು ಅಕ್ರಮ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ದಾಖಲಿಸಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವ ಮುರುಗೇಶ್ ನಿರಾಣಿ, ನಿವೃತ್ತ ಐಎಎಸ್ ಅಧಿಕಾರಿ ವಿ.ಪಿ.ಬಳಿಗಾರ್ ವಿರುದ್ಧ ದೂರು ನೀಡಲಾಗಿದ್ದು, 9.20 ಎಕರೆ ಜಮೀನನ್ನು ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿನ ನಾಲ್ಕನೇ ಹಂತದ ಉದ್ದೇಶಕ್ಕಾಗಿ 1993-94ರಲ್ಲಿ ನೋಟಿಕೇಶನ್ ಮಾಡಲಾಗಿತ್ತು. 1995-96ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು. 2009ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರನ್ನು ಭೂ ಮಾಲಿಕರಾದ ಪಿಳ್ಳಾರೆಡ್ಡಿ, ತಿಮ್ಮರೆಡ್ಡಿ, ಶಿವಕುಮಾರ್ ಭೇಟಿಯಾಗಿ ವಾಣಿಜ್ಯ ಉದ್ದೇಶಕ್ಕಾಗಿ ಪರಿವರ್ತನೆ ಮಾಡುವ ಕುರಿತು ಚರ್ಚೆ ನಡೆಸಿದ್ದರು.