ನವದೆಹಲಿ, ಅ.01(Daijiworld News/SS): ಸುಪ್ರೀಂ ಕೋರ್ಟ್ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ವಿಚಾರಣೆಗಾಗಿ ಸಾಂವಿಧಾನಿಕ ಪೀಠಕ್ಕೆ ರವಾನೆ ಮಾಡಿತ್ತು. ಅದರಂತೆ ಇಂದು ಈ ಅರ್ಜಿಗಳ ವಿಚಾರಣೆ ಆರಂಭಿಸಿದ ಸಾಂವಿಧಾನಿಕ ಪೀಠ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿ, ಜಮ್ಮುಕಾಶ್ಮಿರದ ವಿಶೇಷ ಸ್ಥಾನಮಾನ ರದ್ದತಿಯ ಬಗ್ಗೆ ಎದ್ದಿರುವ ಆಕ್ಷೇಪಗಳಿಗೆ ಇನ್ನು ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಮಾತ್ರವಲ್ಲ, ಅರ್ಜಿ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಿದೆ.
ಕಾಶ್ಮೀರದಲ್ಲಿ ಹೇರಲಾಗಿರುವ ನಿರ್ಬಂಧಗಳು, ಪತ್ರಕರ್ತರ ಪ್ರವೇಶ ಸೇರಿದಂತೆ ವಿವಿಧ ಅರ್ಜಿಗಳನ್ನೂ ಕೂಡ ಸಾಂವಿಧಾನಿಕ ಪೀಠಕ್ಕೆ ರವಾನೆ ಮಾಡಲಾಗಿದೆ. ಇದೀಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್ ವಿ ರಮಣ ಅವರ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ಕಾಶ್ಮೀರಕ್ಕೆ ಸಂಬಂಧಿಸಿದ ಈ ಎಲ್ಲ ಅರ್ಜಿಗಳ ವಿಚಾರಣೆ ನಡೆಸುತ್ತಿದೆ.