ಬೆಂಗಳೂರು, ಅ 01 (DaijiworldNews/SM): ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಕುಮಾರಸ್ವಾಮಿ ಮನವಿ ಸಲ್ಲಿಸಿದ್ದರು. ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯ ನೀಡಿದ್ದ ಸಮನ್ಸ್ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಅರ್ಜಿ ಪುರಸ್ಕರಿಸಿಲ್ಲ. ಬದಲಿಗೆ ವಜಾಗೊಳಿಸಿ ಆದೇಶ ನೀಡಿದೆ.
ಇನ್ನು ಕುಮಾರಸ್ವಾಮಿ ಅವರ ಪರ ವಕೀಲರು ಕೋರ್ಟ್ ಗೆ ಹಾಜರಾಗುವ ಕುರಿತಂತೆ ಕಾಲಾವಕಾಶ ನೀಡಬೇಕೆಂದು ಮನವಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿರುವ ಕೋರ್ಟ್ ಖುದ್ದು ಹಾಜರಾತಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಿದೆ. ಹಾಗೂ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿದೆ.