ಬೆಂಗಳೂರು, ಅ 04 (DaijiworldNews/SM): ತೀವ್ರವಾದ ಪ್ರವಾಹಕ್ಕೆ ತುತ್ತಾಗಿರುವ ರಾಜ್ಯಕ್ಕೆ ಪರಿಹಾರ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿ ಪರಿಹಾರ ಬಿಡುಗಡೆಗೊಳಿಸುವಂತೆ ಮನವಿ ಸಲ್ಲಿಸಲಾಗಿದ್ದು ಇದನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಇದರ ಬೇಳೆ ಬೆಯಿಸಿಕೊಂಡಿರುವ ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ವಾಗ್ವಾದ ಶುರುಮಾಡಿದೆ.
ಕೇಂದ್ರದಲ್ಲೂ ರಾಜ್ಯದಲ್ಲೂ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದರೂ ಕೂಡ ಪರಿಹಾರ ತರುವಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ವಿಫಲರಾಗಿದ್ದು ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಒತ್ತಾಯಿಸುತ್ತಿದೆ. ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೇಂದ್ರ ಸರಕಾರದ ನಿರ್ಧಾರಕ್ಕೆ ಮಾಜಿ ಸಚಿವ ಎಂ.ಬಿ. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರಕಾರ ಸಲ್ಲಿಸಿದ್ದ ವರದಿಯನ್ನು ತಿರಸ್ಕರಿಸಿರಿಸಿರುವುದನ್ನು ಖಂಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನೆರೆ ಪರಿಹಾರ ವರದಿ ತಿರಸ್ಕರಿಸಿ ಮತ್ತೆ ವರದಿ ಕಳಿಸುವಂತೆ ರಾಜ್ಯಕ್ಕೆ ನಿರ್ದೇಶನ ನೀಡಿದೆ. ಎನ್ ಡಿಆರ್ ಎಫ್ ನಿಯಮಗಳನ್ನು ಸರ್ಕಾರ ತಿರಸ್ಕರಿಸಿದ್ದು, ಇದನ್ನು ನಾವು ಪ್ರಶ್ನಿಸುತ್ತಿದ್ದೇವೆ ಎಂದರು. ಅಲ್ಲದೆ ನರೇಂದ್ರ ಮೋದಿ ಸರಕಾರದಿಂದ ರಾಜ್ಯಕ್ಕೆ ಅವಮಾನವಾಗಿದೆ ಎಂದಿದ್ದಾರೆ.