ಬೆಂಗಳೂರು, ಅ 04 (DaijiworldNews/SM): ಎಸ್ ಎಸ್ ಎಲ್ ಸಿ ತನಕ ನಿರಾತಂಕದಿಂದ ತೇರ್ಗಡೆಯಾಗುತ್ತಿದ್ದ ವಿದ್ಯಾರ್ಥಿಗಳಿಗೆ ಇದೀಗ ಏಳನೇ ತರಗತಿಯಲ್ಲಿ ಮತ್ತೆ ನಿರ್ಣಾಯಕ ಪರೀಕ್ಷೆ ಇರಲಿದೆ. ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಉತ್ತಮ ಪಡಿಸುವ ನಿಟ್ಟಿನಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದ್ದು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.
ಶುಕ್ರವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಎಸ್ ಎಲ್ ಸಿ ತನಕ ವಿದ್ಯಾರ್ಥಿಗಳಿಗೆ ಹೇಳಿಕೊಳ್ಳುವಂತಹ ಪರೀಕ್ಷೆಗಳು ಇಲ್ಲದ ಕಾರಣ ವಿದ್ಯಾರ್ಥಿಗಳ ಓದಿನ ಸಾಮಾರ್ಥ್ಯ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮತ್ತೆ ೭ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟದೆಡೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿದ್ದಾರೆ.
ಇನ್ನು 7ನೇ ತರಗತಿಯ ಪಬ್ಲಿಕ್ ಪರೀಕ್ಷೆಗೆ ಪ್ರಶ್ನೆಗಳನ್ನು ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ತಯಾರಿಸಲಿದೆ. ಆದರೆ, ಮೌಲ್ಯಮಾಪನಗಳನ್ನು ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವುದು ಎಂದಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ವಿದ್ಯಾರ್ಥಿಗಳನ್ನು ತಯಾರು ಮಾಡುವ ಉದ್ದೇಶದಿಂದ ಏಳನೇ ತರಗತಿಯಲ್ಲಿಯೇ ಪಬ್ಲಿಕ್ ಪರೀಕ್ಷೆ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಸರ್ಕಾರಕ್ಕೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಪ್ರಸ್ತಾವಣೆಯನ್ನು ಜಾರಿಗೆ ತರುವ ಮೂಲಕ ವಿದ್ಯಾರ್ಥಿಗಳ ಓದಿನ ಗುಣಮಟ್ಟವನ್ನು ಹೆಚ್ಚಿಸುವತ್ತ ಮುಂದಡಿಯಿಟ್ಟಿದ್ದಾರೆ.