ಬೆಂಗಳೂರು, ಅ.08(Daijiworld News/SS): ಬಹುತೇಕ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಪರ ಒಲವು ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಸೂಚನೆಯಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಮುಖಂಡರ ಜೊತೆಗೆ ಮಾತುಕತೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದರು. ಈ ವೇಳೆ ಬಹುತೇಕ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಪರ ಒಲವು ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.
ಶಾಸಕರು, ಪರಿಷತ್ ಸದಸ್ಯರು ಸೇರಿದಂತೆ ಸುಮಾರು 80 ಜನರ ಅಭಿಪ್ರಾಯವನ್ನು ಮಧುಸೂದನ್ ಮಿಸ್ತ್ರಿಯವರು ಪಡೆದುಕೊಂಡಿದ್ದು, ಈ ವೇಳೆ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಲು ಸಿದ್ದರಾಮಯ್ಯ ನಾಯಕತ್ವ ಅಗತ್ಯ ಇದೆ ಎಂಬ ಅಭಿಪ್ರಾಯವನ್ನು ಬಹುತೇಕ ಶಾಸಕರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸದ್ಯ ಪ್ರತಿಪಕ್ಷ ನಾಯಕ ಸ್ಥಾನ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಒಲಿಯುವ ಸಾಧ್ಯತೆ ಬಹುತೇಕ ಹೆಚ್ಚಾಗಿದ್ದು, ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ಕುರಿತಾಗಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ರಾಜ್ಯ ಕಾಂಗ್ರೆಸ್ ಮುಖಂಡರು ದೆಹಲಿಯಲ್ಲಿ ಹೈ ಕಮಾಂಡ್ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.