ನವಹೆಹಲಿ, ಅ 09 (DaijiworldNews/SM): ಹಲವಾರು ನಾಟಕೀಯ ಬೆಳವಣಿಗೆಯ ಬಳಿಕ ರಾಜ್ಯ ವಿಧಾನಸಭೆ ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ ಮಾಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸಿದ್ದರಾಮಯ್ಯ ಅವರ ಹೆಸರು ಅಂತಿಮಗೊಳಿಸಿ ಆದೇಶ ಹೊರಡಿಸಿದ್ದಾರೆ.
ಉಪಚುನಾವಣೆ ಜವಾಬ್ದಾರಿ:
ಇನ್ನು ಮೂಲಕಾಂಗ್ರೆಸ್ ನಾಯಕರು ವಿಪಕ್ಷ ಸ್ಥಾನಕ್ಕೆ ಆಕಾಂಕ್ಷಿಗಳಾಗಿರುವ ಸಂದರ್ಭದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ರಾಜ್ಯ ವಿಧಾನಸಭೆ ವಿಪಕ್ಷ ನಾಯಕರಾಗಿ ಹೈಕಮಾಂಡ್ ಆಯ್ಕೆ ಮಾಡಿದೆ. ಈ ನಡುವೆ ಕೆಲವೊಂದು ಷರತ್ತುಗಳನ್ನು ಕೂಡ ವಿಧಿಸಿದೆ ಎನ್ನಲಾಗಿದೆ. ಪ್ರಮುಖವಾಗಿ ರಾಜ್ಯದಲ್ಲಿ ಮೈತ್ರಿ ಸರಕಾರ ಪತನಕ್ಕೆ ಕಾರಣರಾದ ಶಾಸಕರ ಕ್ಷೇತ್ರಗಳಿಗೆ ನಡೆಯುವ ಉಪ ಸಮರದ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರ ಹೆಗಲಿಗೆ ನೀಡಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.