ನವದೆಹಲಿ, ಅ.10 (DaijiworldNews/TA): ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಪ್ರತಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರೊಂದಿಗೆ ಟಿಎಂಸಿ ಸಂಸದರಾದ ಡೆರೆಕ್ ಒಬ್ರೇನ್, ಪ್ರತಿಮಾ ಮಂಡಲ್ ಮತ್ತು ಡೋಲಾ ಸೇನ್ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಟಿಎಂಸಿ ನಾಯಕರು, ದೆಹಲಿಯ ಸೌತ್ ಅವೆನ್ಯೂದಲ್ಲಿರುವ ಬಸ್ ನಿಲ್ದಾಣದ ಬಳಿ ಧರಣಿ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಮತಾ ಬ್ಯಾನರ್ಜಿ ಸೇರಿದಂತೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟದ ಭಾಗವಾಗಿ ಈ ಪ್ರತಿಭಟನೆ ನಡೆದಿದೆ. ಎಸ್ಐಆರ್ ಪ್ರಕ್ರಿಯೆಯಿಂದಾಗಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆಯಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
ಮತದಾರರ ಪಟ್ಟಿಯಲ್ಲಿನ ಅಕ್ರಮಗಳಿಗೆ ಚುನಾವಣಾ ಆಯೋಗವೇ ಹೊಣೆ ಎಂದು ದೂರಿರುವ ಇಂಡಿಯಾ ಮೈತ್ರಿಕೂಟ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದೆ. ಮತದಾರರ ಹಕ್ಕುಗಳ ರಕ್ಷಣೆ ಮತ್ತು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಖಚಿತಪಡಿಸಬೇಕೆಂಬ ಬೇಡಿಕೆಯೊಂದಿಗೆ ಪ್ರತಿಪಕ್ಷಗಳು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿವೆ.