ನವದೆಹಲಿ, ಅ.10 (DaijiworldNews/AA): ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸ್ಥಾಪಕಿ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಟಿಎಂಸಿ ನಾಯಕರು, ದೆಹಲಿಯ ಸೌತ್ ಅವೆನ್ಯೂದಲ್ಲಿರುವ ಬಸ್ ನಿಲ್ದಾಣದ ಬಳಿ ಧರಣಿ ಕುಳಿತಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಮತಾ ಬ್ಯಾನರ್ಜಿಯವರ ಜೊತೆಗೆ ಟಿಎಂಸಿ ಸಂಸದರಾದ ಡೆರೆಕ್ ಒಬ್ರೇನ್, ಪ್ರತಿಮಾ ಮಂಡಲ್ ಹಾಗೂ ಡೋಲಾ ಸೇನ್ ಅವರನ್ನು ಕೂಡ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ.
ಮಮತಾ ಬ್ಯಾನರ್ಜಿ ಅವರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ದಿಲ್ಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.