ಬೆಂಗಳೂರು, ಅ.11(Daijiworld News/SS): ನಮ್ಮ ವರ್ಚಸ್ಸಿಗೆ ಧಕ್ಕೆ ತರಲು ಕೇವಲ ಕಾಂಗ್ರೆಸ್ ನಾಯಕರುಗಳನ್ನೆ ಐಟಿ ಅಧಿಕಾರಿಗಳು ಟಾರ್ಗೆಟ್ ಮಾಡುತ್ತಿದ್ದಾರೆ. ಇದೊಂದು ರೀತಿಯ ರಾಜಕೀಯ ಕಿರುಕುಳ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಗುಜರಾತ್ ಶಾಸಕರುಗಳಿಗೆ ಆಶ್ರಯ ನೀಡಿದ್ದಕ್ಕೆ ಡಿಕೆ ಶಿವಕುಮಾರ್ ಅವರ ಮೇಲೆ ಐಟಿ ದಾಳಿ ನಡೆಯಿತು. ಬಿಜೆಪಿ ಯವರು 5 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಶಾಸಕ ಶ್ರೀನಿವಾಸ ಗೌಡ ವಿಧಾನಸಭೆಯಲ್ಲೇ ನೇರ ಆರೋಪ ಮಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಇಲ್ಲ, ಐಟಿ ಮತ್ತು ಇಡಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ವಿಎಸ್ ಉಗ್ರಪ್ಪ ಪ್ರಶ್ನಿಸಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಹಾಗೂ ಮಾಜಿ ಸಂಸದ ಆರ್ ಎಲ್ ಜಾಲಪ್ಪ ಅವರ ಮೇಲೆ ನಡೆದಿರುವ ಐಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಇದು ದ್ವೇಷ ರಾಜಕೀಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದೆ. ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.