ಬೆಂಗಳೂರು,ಅ 11 (Daijiworld News/MSP): ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೂ, ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಂಸದೆ ಶೋಭಾ ಕರಂದ್ಲಾಜೆಗೆ ಅ. 11 ರ ಶುಕ್ರವಾರ ದಂಡ ವಿಧಿಸಿ ಷರತ್ತು ಬದ್ಧ ಜಾಮೀನು ನೀಡಿದೆ.
ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಈ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯು ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ಪ್ರಕರಣ ಸಂಬಂಧ ಶೋಭಾ ಕರಂದ್ಲಾಜೆ ಅವರು ಗುರುವಾರ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಕುರಿತು ನ್ಯಾಯಾಲಯ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿತು. ಸಂಸದೆ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿ, ಜಾಮೀನು ಮಂಜೂರು ಮಾಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದ್ದರು. ವಕೀಲರ ಮನವಿ ಪುರಸ್ಕರಿಸಿದ ನ್ಯಾಯಾಲಯ 200 ರೂ. ದಂಡ ವಿಧಿಸಿ, 50 ಸಾವಿರ ರೂ. ವೈಯಕ್ತಿಕ ಬಾಂಡ್ ಮತ್ತು 10 ಸಾವಿರ ರೂ. ನಗದು ಭದ್ರತೆ ಒದಗಿಸುವಂತೆ ಆದೇಶ ಹೊರಡಿಸಿತು. ವಿಚಾರಣೆ ವೇಳೆ ಸಂಸದೆ ಖುದ್ದು ಶೋಭಾ ಕರಂದ್ಲಾಜೆ ಖುದ್ದು ಹಾಜರಾಗಿದ್ದರು.
ಐಎಂಎ ಕಂಪನಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂಪನಿಯ ಮುಖ್ಯಸ್ಥ ಮನ್ಸೂರ್ ಖಾನ್ ಹೂಡಿದಾರರ ಹಣವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗಾಗಿ ಬಳಸುತ್ತಿದ್ದಾರೆ ಎಂದು ಸಂಸದೆ ಆರೋಪಿಸಿದ್ದರು. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದರು. ಸಂಸದೆಯ ಈ ಹೇಳಿಕೆ ವಿರುದ್ದ ಪಿಎಫ್ಐ ಸಂಘಟನೆ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ಆದರೆ, ನೋಟಿಸ್ ನೀಡಿದರೂ ಕೋರ್ಟ್ಗೆ ಹಾಜರಾಗದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಶೋಭಾ ವಿರುದ್ಧ ವಾರಂಟ್ ಜಾರಿ ಮಾಡಿತ್ತು.