ಬೆಂಗಳೂರು, ಅ.12(Daijiworld News/SS): 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ನಮ್ಮ ನಾಯಕರು ಉತ್ಸಾಹದಿಂದ ಚುನಾವಣೆ ಎದುರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮರ್ಥ ಆಡಳಿತ ನೀಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿರುವ ಕಾರಣ ಜನರಿಗೆ ಈ ಬಗ್ಗೆ ವಿವರಿಸುವ ಪ್ರಯತ್ನ ಮಾಡುತ್ತೇವೆ. ಕಾಂಗ್ರೆಸ್ ಪಕ್ಷದ ವೀಕ್ಷಕರು ಎಲ್ಲ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾಗುವವರು ಇದ್ದರೆ, ಆ ಬಗ್ಗೆಯೂ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತಸಹಾಯಕ ರಮೇಶ್ ಆತ್ಮಹತ್ಯೆ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಈ ಪ್ರಕರಣ ಸಂಬಂಧ ಪೊಲೀಸರು ಸಮಗ್ರ ತನಿಖೆ ನಡೆಸಬೇಕು. ರಮೇಶ ಒಳ್ಳೆಯ ಕೆಲಸಗಾರ. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲೂ ತುಂಬಾ ವರ್ಷ ಕೆಲಸ ಮಾಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಕೆಲವರಿಗೆ ರಮೇಶ ಕರೆ ಮಾಡಿ, ಐಟಿ ಅಧಿಕಾರಿಗಳ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ. ಹಾಗಾಗಿ ಸೂಕ್ತ ತನಿಖೆ ಆಗಬೇಕು ಎಂದು ಹೇಳಿದರು.