ನವದೆಹಲಿ, ಅ.10 (DaijiworldNews/AK): ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಬಂಧಿತರಾದವರನ್ನ ಭಾನುವಾರದೊಳಗೆ ಬಿಡುಗಡೆ ಮಾಡದಿದ್ದರೆ ಉಪವಾಸ ಸತ್ಯಾಗ್ರಹ ಅಥವಾ ಪಾದಯಾತ್ರೆ ನಡೆಸಬೇಕಾಗಬಹುದು ಎಂದು ಹೋರಾಟಗಾರ ಸೋನಂ ವಾಂಗ್ಚುಕ್ ಎಚ್ಚರಿಸಿದ್ದಾರೆ.

ಎಕ್ಸ್ನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ವಾಂಗ್ಚುಕ್, ದೆಹಲಿಯ ಪರಿಸ್ಥಿತಿಯನ್ನು ಅಘೋಷಿತ ತುರ್ತು ಪರಿಸ್ಥಿತಿ ಎಂದು ಕರೆದಿದ್ದಾರೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ಅಘೋಷಿತ ತುರ್ತು ಪರಿಸ್ಥಿತಿಯಲ್ಲಿರೋದನ್ನ ನಾನು ಎಂದಿಗೂ ಊಹಿಸಿರಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದರಲ್ಲದೇ, ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗಿದ್ದವರನ್ನ ಬಂಧಿಸಿರುವುದಕ್ಕೆ ಆಕ್ಷೇಪಿಸಿದ್ದಾರೆ.
ಚುನಾವಣಾ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಚಾರವಾಗಿ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಆಯೋಜಿಸಲಾಗಿತ್ತು.
ಶನಿವಾರ ಬಂಧಿತರಾದವರಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು AISA ನಾಯಕಿ ನೇಹಾ ಬೋರಾ ಕೂಡ ಇದ್ದಾರೆ. ಪ್ರತಿಭಟನೆಗೆ ಅನುಮತಿ ನೀಡಿಲ್ಲ ಎಂದು ತಿಳಿಸಿ ದೆಹಲಿ ಪೊಲೀಸರು ಹಲವು ಪ್ರತಿಭಟನಾಕಾರರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.