ಕೊಡಗು, ಅ.18(Daijiworld News/SS): ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮೂರು ದಿನ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.
ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 115 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರದಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.
ಪ್ರವಾಹದ ಹೊಡೆತಕ್ಕೆ ಸಿಲುಕಿ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಕೊಡಗಿನಲ್ಲಿ ಮತ್ತೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಆಲರ್ಟ್ ಘೋಷಣೆ ಮಾಡಿರುವ ಜಿಲ್ಲಾಡಳಿತ, ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.