ಕೊಪ್ಪಳ, ಅ.21(Daijiworld News/SS): ಅನರ್ಹ ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಇನ್ನೂ ಅವರು ಬಿಜೆಪಿ ಸೇರಿಲ್ಲ. ಅವರ ವ್ಯಾಜ್ಯ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ತೀರ್ಪು ಬಂದ ಬಳಿಕ ಅವರು ಪಕ್ಷಕ್ಕೆ ಸೇರಿದ ಮೇಲೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಚಿಂತಿಸಬೇಕು ಎಂದು ತಿಳಿಸಿದರು.
ಪಶ್ಚಿಮ ಮಹಾರಾಷ್ಟ್ರದ ಐದು ಜಿಲ್ಲೆಗಳ ಉಸ್ತುವಾರಿ ನನಗಿದೆ. ಅಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಹಿಂದಿನ ವಾತಾವರಣ ಸಂಪೂರ್ಣ ಬದಲಾಗಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. 288 ಸ್ಥಾನಕ್ಕೆ 220 ಸ್ಥಾನ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗಲಿದೆ. ರಾಜ್ಯ ಸರ್ಕಾರ ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದೆ ಎಂದು ಹೇಳಿದರು.
ಪ್ರಸ್ತುತ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರ ಚರ್ಚೆಯಲ್ಲಿದೆ. ಸಾವರ್ಕರ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನ ಮುಡಿಪಾಗಿಟ್ಟು ಹೋರಾಡಿದ್ದಾರೆ. ಜೈಲುವಾಸ ಅನುಭವಿಸಿದ್ದಾರೆ. ಅಂತವರನ್ನ ಹೀಯಾಳಿಸಿದರೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದಂತಾಗಲಿದೆ. ಸಿದ್ದಗಂಗಾ ಶ್ರೀಗಳಿಗೂ ಭಾರತ ರತ್ನ ಬರುತ್ತದೆ. ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.