ನವದೆಹಲಿ, ಅ.23(Daijiworld News/SS): ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್ಗೆ ಜಾಮೀನು ಮಂಜೂರು ಮಾಡಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಡಿಕೆಶಿ ಅವರಿಗೆ ಜಾಮೀನು ಕೊಡುವ ಸಂದರ್ಭದಲ್ಲಿ ನ್ಯಾಯಾಲಯ ಹಲವು ಷರತ್ತುಗಳನ್ನು ವಿಧಿಸಿದೆ. 25 ಲಕ್ಷ ರೂ. ಬಾಂಡ್ ಇಡಬೇಕು. ಡಿಕೆಶಿ ತಮ್ಮ ಪಾಸ್ಪೋರ್ಟ್ ನ್ಯಾಯಾಲಯದ ವಶಕ್ಕೆ ಒಪ್ಪಿಸಬೇಕು, ಅಗತ್ಯಬಿದ್ದಾಗ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಲಯ ಹೇಳಿದೆ.
2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಮನೆಯಲ್ಲಿ ಐಟಿ ದಾಳಿಯಾದಾಗ ದಾಖಲೆಗಳಿಲ್ಲದ ಹಣ ಪತ್ತೆಯಾಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಇ.ಡಿ.ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆಂದು ದೆಹಲಿಗೆ ಕರೆಸಿದ್ದರು. ಆದರೆ ವಿಚಾರಣೆಗೆ ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.