ಮುಂಬೈ, ಅ.24(Daijiworld News/SS): ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ-ಶಿವಸೇನೆ ಮೈತ್ರಿಕೂಟ ಭರ್ಜರಿ ಜಯ ಸಾಧಿಸಲಿದೆ ಎಂದಿದೆ. ಅದು ಸತ್ಯ. ಆದರೆ ಬಿಜೆಪಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಸಾಧ್ಯವೇ ಇಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳ ಪೈಕಿ, 124 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಶಿವಸೇನೆ, 100 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ರಾವತ್ ಹೇಳಿದರು. ಮಾತ್ರವಲ್ಲ, ಮಹಾರಾಷ್ಟ್ರದಲ್ಲಿ ಬಿಜೆಪಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಸಾಧ್ಯವೇ ಇಲ್ಲ. ಅದಕ್ಕೆ ನಮ್ಮ ನೆರವು ಬೇಕೇ ಬೇಕು ಎಂದು ರಾವತ್ ಹೇಳಿದರು.
ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟ 200ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಅದರಲ್ಲಿ 100 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಶಿವಸೇನೆಯೇ ಗೆಲ್ಲಲಿದೆ ಎಂದು ರಾವತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ವರ್ಷ ಏಪ್ರಿಲ್ -ಮೇ ತಿಂಗಳಿನಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡಿದ್ದವು.