ಶ್ರೀನಗರ, ಅ 27 (DaijiworldNews/SM): ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇಲ್ಲಿನ ಸೋಪೋರ್ ಪಟ್ಟಣದ ಬಸ್ ನಿಲ್ದಾಣದ ಮೇಲೆ ಉಗ್ರರು ಗ್ರೆನೆಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಸುಮಾರು ಇಪ್ಪತ್ತಕ್ಕೂ ಅಧಿಕ ಮಂದಿಗೆ ಗಾಯವಾಗಿದೆ.
ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಪೈಕಿ ಒಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಇನ್ನು ಘಟನೆ ನಡೆದ ತಕ್ಷಣ ಸ್ಥಳದಲ್ಲಿ ರಕ್ಷಣಾ ಪಡೆ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದೆ. ಅಲ್ಲದೆ ಗ್ರೇನೆಡ್ ದಾಳಿ ನಡೆಸಿದ ಉಗ್ರರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಹ ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಎರಡು ದಿನಗಳ ಹಿಂದಷ್ಟೇ ಶ್ರೀನಗರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರು. ಕಾರನ್ನಗರ್ ಪ್ರದೇಶದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಆರು ಮಂದಿ ಭದ್ರತಾ ಸಿಬ್ಬಂದಿಗಳಿಗೆ ಗಾಯಗಳಾಗಿತ್ತು. ಇನ್ನು ಈ ವರ್ಷ 2,100ಕ್ಕೂ ಅಧಿಕ ಬಾರಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ.