ನವದೆಹಲಿ, ಅ.12 (DaijiworldNews/AA): ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಚಲೋ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಕೇಂದ್ರ ದೆಹಲಿಯ ಪ್ರಮುಖ 6 ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಪಟೇಲ್ ಚೌಕ್, ಜನಪಥ್, ರಾಜೀವ್ ಚೌಕ್, ಮಂಡಿ ಹೌಸ್, ಸೆಂಟ್ರಲ್ ಸೆಕ್ರೆಟರಿಯೇಟ್, ಬಾರಾಖಂಬಾ ರಸ್ತೆಯಲ್ಲಿರುವ ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ಈ ನಿಲ್ದಾಣಗಳಲ್ಲಿ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಸೋಮವಾರ ಬೆಳಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೆ ನಿರ್ಬಂಧಿಸಲಾಗಿದ್ದರೂ, ಮೆಟ್ರೋ ಮಾರ್ಗ ಬದಲಾವಣೆ ಸೌಲಭ್ಯವು ಎಂದಿನಂತೆ ಲಭ್ಯವಿರಲಿದೆ.
ಮೆಟ್ರೋ ನಿರ್ಬಂಧ ಹಾಗೂ ಬಿಗಿ ಪೊಲೀಸ್ ಭದ್ರತೆಯಿಂದಾಗಿ ದೆಹಲಿಯ ಪ್ರಮುಖ ರಸ್ತೆಗಳಲ್ಲಿ ತೀವ್ರ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಜೊತೆಗೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆಯಿದೆ.
ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ಸುಪ್ರೀಂ ಕೋರ್ಟ್ ಚಲೋ ನಡೆಸುತ್ತಿದೆ.