ಬೀದರ್, ಅ.12 (DaijiworldNews/TA): ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಸಹೋದರ ಹಾಗೂ ಬೀದರ್ ಜಿಲ್ಲಾ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಅಧ್ಯಕ್ಷ ಅಮರ್ ಖಂಡ್ರೆ ಅವರಿಗೆ ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಅಮರ್ ಖಂಡ್ರೆ ಅವರು ಮೂರನೇ ಬಾರಿಗೆ ಬ್ಯಾಂಕ್ ಅಧ್ಯಕ್ಷರಾಗಿ ಮುಂದುವರಿಯುತ್ತಿರುವುದನ್ನು ಪ್ರಶ್ನಿಸಿ ಡಿಸಿಸಿ ಬ್ಯಾಂಕ್ ಸದಸ್ಯರಾದ ಅತಿವಾಳ ಕಪಲಾಪುರ ಮತ್ತು ಶಿವರಾಜ್ ವೀರಶೆಟ್ಟಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅಮರ್ ಖಂಡ್ರೆ ಅವರು ರಾಜಕೀಯ ಪ್ರಭಾವ ಬಳಸಿ ನಿಯಮಗಳಿಗೆ ವಿರುದ್ಧವಾಗಿ ಮೂರನೇ ಬಾರಿಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುತ್ತಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ತಿದ್ದುಪಡಿ ನಿಯಮಗಳ ಪ್ರಕಾರ, ಒಬ್ಬರು ಮೂರನೇ ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯಲು ಅವಕಾಶವಿಲ್ಲ ಎಂಬುದು ಅರ್ಜಿದಾರರ ವಾದವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಮುಂದುವರಿಕೆಯನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿಯ ಹೈಕೋರ್ಟ್ ವಿಭಾಗೀಯ ಪೀಠವು ಅಮರ್ ಖಂಡ್ರೆ ಅವರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ನವೆಂಬರ್ 5ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ನ್ಯಾಯಾಲಯದ ಮುಂದಿನ ವಿಚಾರಣೆ ಮಹತ್ವ ಪಡೆದುಕೊಂಡಿದ್ದು, ಬ್ಯಾಂಕ್ ಅಧ್ಯಕ್ಷರ ಅವಧಿ ಮತ್ತು ಸಂಬಂಧಿತ ನಿಯಮಗಳ ಕುರಿತು ನ್ಯಾಯಾಲಯದ ಪರಿಶೀಲನೆ ನಡೆಯಲಿದೆ.