ಬೆಂಗಳೂರು, ನ. 07 (DaijiworldNews/SM): ಮಾಜಿ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕನಾಗಿ ಆಯ್ಕೆಯಾದ ಬಳಿಕ ಬಿಜೆಪಿ ವಿರುದ್ಧ ಸಮರ ಸಾರುತ್ತಿದ್ದಾರೆ. ಈ ಹಿಂದೆ ಆಡಳಿತದಲ್ಲಿದ್ದ ಮೈತ್ರಿ ಸರಕಾರ ಪತನ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಆಪರೇಷನ್ ಕಮಲದ ವಿರುದ್ಧ ಸಿದ್ದರಾಮಯ್ಯ ತಿರುಗಿ ಬಿದ್ದಿದ್ದಾರೆ.
ಆಪರೇಷನ್ ಕಮಲ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಯ ಆಡಿಯೋ, ವಿಡಿಯೋ ದಾಖಲೆಯನ್ನು ಬಿಎಸ್ ವೈ ಸರ್ಕಾರದ ವಿರುದ್ಧ ದಾಳವಾಗಿ ಸಿದ್ದರಾಮಯ್ಯ ಬಳಸಿಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ರಾಷ್ಟ್ರಪತಿಗಳಿಗೆ ದೂರು ನೀಡಲು ಸಿದ್ದರಾಮಯ್ಯ ಸಿದ್ಧತೆಗಳನ್ನು ನಡೆಸಿದ್ದಾರೆ.
ಆಪರೇಷನ್ ಕಮಲ ಆಡಿಯೋ ಬಿಜೆಪಿ ಪಕ್ಷದಿಂದಲೇ ಹೊರ ಬಂದಿದೆ. ಹಾಗೂ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ಇದು ಸ್ಪಷ್ಟಪಡಿಸುತ್ತದೆ. ಇದನ್ನೇ ಸಿದ್ದರಾಮಯ್ಯ ಅಸ್ತ್ರವನ್ನಾಗಿಸಿಕೊಂಡಿದ್ದಾರೆ.
ಈಗಾಗಲೇ ಆಪರೇಷನ್ ಕಮಲ ಕುರಿತ ಹೇಳಿಕೆಯನ್ನು ಸುಪ್ರೀಂಕೋರ್ಟ್ ಸಾಕ್ಷ್ಯವಾಗಿ ಪರಿಗಣಿಸುವಂತೆ ಕಾಂಗ್ರೆಸ್ ಮನವಿ ಮಾಡಿಕೊಂಡಿದೆ. ಅಲ್ಲದೆ, ರಾಜ್ಯದಲ್ಲಿದ್ದ ಮೈತ್ರಿ ಸರ್ಕಾರದ ಪತನಕ್ಕೆ ಇಂದಿನ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ನೇರ ಕಾರಣ ಎಂದು ರಾಷ್ಟ್ರಪತಿ ಅವರಿಗೆ ದೂರು ಸಲ್ಲಿಸಲು ನಿರ್ಧರಿಸಿದ್ದಾರೆ.
ಇನ್ನು ಈ ಬಗ್ಗೆ ಸ್ವತಹ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯ ಕುದುರೆ ವ್ಯಾಪಾರ ಮತ್ತು ಆಪರೇಷನ ಕಮಲಕ್ಕೆ ಸಂಬಂಧಿಸಿದ ಯಡಿಯೂರಪ್ಪ ಅವರ ಆಡಿಯೋ ಕ್ಲಿಪ್ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರಿಗೆ ದೂರು ನೀಡುತ್ತೇವೆ. ಅಮಿತ್ ಶಾ ಕೇಂದ್ರ ಸಚಿವರಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂಬುದನ್ನು ರಾಷ್ಟ್ರಪತಿಗಳಿಗೆ ಮನವರಿಕೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.