ಬೆಂಗಳೂರು, ನ.09(Daijiworld News/SS): ಅಯೋಧ್ಯೆ ಪ್ರಕರಣದ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.
ಹಿಂದೂ-ಮುಸ್ಲಿಂ ಸಮುದಾಯದ ಭಾವನಾತ್ಮಕ ವಿಚಾರ ಇದಾಗಿರುವುದರಿಂದ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮಕೈಗೊಳ್ಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ಮಂಗಳೂರು, ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ಬೆಂಗಳೂರಿನ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗುತ್ತಿದೆ. ಮಸೀದಿ ಮತ್ತು ಮಂದಿರಗಳ ಮುಂದೆ ಪೊಲೀಸರನ್ನು ನಿಯೋಜಿಸಲಾಗುತ್ತಿದ್ದು, ವಿಶೇಷವಾಗಿ ಮುಸ್ಲಿಂ ಏರಿಯಾಗಳಲ್ಲಿ ಕಟ್ಟೆಚ್ಚರದಿಂದ ಇರುವಂತೆ ಆದೇಶಿಸಲಾಗಿದೆ.
ಇನ್ನು ರಾಜ್ಯಾದ್ಯಂತ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.