ಲಕ್ನೋ, ನ.09(Daijiworld News/SS): ರಾಮ ಜನ್ಮಭೂಮಿ - ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ತೆರೆ ಎಳೆಯಲಿದೆ. ಈ ಹಿನ್ನೆಲೆ ಅಯೋಧ್ಯೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಅಯೋಧ್ಯೆಯಲ್ಲಿ ಬಹುಹಂತಗಳ ರಕ್ಷಣಾ ವ್ಯವಸ್ಥೆ ಮಾಡಲಾಗಿದ್ದು, ಪರಿಸ್ಥಿತಿ ಅವಲೋಕಿಸಲು ಡ್ರೋಣ್ಗಳ ಬಳಕೆ ಕೂಡ ಮಾಡಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಭಯೋತ್ಪಾದಕ ನಿಗ್ರಹ, ಬಾಂಬ್ ನಿಷ್ಕ್ರೀಯ ದಳ, ಕ್ಷಿಪ್ರ ಕಾರ್ಯಪಡೆಯನ್ನು ನಗರದಲ್ಲಿ ನಿಯೋಜಿಸಲಾಗಿದೆ. ತುರ್ತು ಸ್ಥಿತಿಯಲ್ಲಿ ಬಳಸಲು 2 ಹೆಲಿಕಾಪ್ಟರ್ ಗಳ ವ್ಯವಸ್ಥೆ ಕೂಡ ಮಾಡಿಕೊಳ್ಳಲಾಗಿದೆ. ಅಯೋಧ್ಯೆಯಲ್ಲಿ ಸೇನಾಪಡೆಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರಚೋದನಕಾರಿ ಪೋಸ್ಟ್, ಸಂದೇಶ ಹರಡಬಾರದೆಂದು ಸಾಮಾಜಿಕ ಜಾಲತಾಣಗಳ ಮೇಲೂ ತೀವ್ರ ನಿಗಾವಹಿಸಲಾಗಿದೆ.
ಮಾತ್ರವಲ್ಲ, ಹೊರ ರಾಜ್ಯಗಳಿಂದ ಬರುವವರ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಗಲಭೆಗಳಾದರೆ ಬಂಧಿತರನ್ನು ಇಡಲು ಉತ್ತರಪ್ರದೇಶದ ಅಂಬೇಡ್ಕರ್ ನಗರದಲ್ಲಿ 8 ತಾತ್ಕಾಲಿಕ ಜೈಲುಗಳ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ.