ಶ್ರೀನಗರ, ನ.11(Daijiworld News/SS): ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಸೇನೆ ಓರ್ವ ಉಗ್ರನನ್ನು ಕೊಂದಿದ್ದು, ಇಬ್ಬರನ್ನು ವಶಕ್ಕೆ ಪಡೆದುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಲವ್ಡಾರಾ ಜಿಲ್ಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಸೇನೆ ದಾಳಿ ನಡೆಸಿದ್ದು, ಭಾರಿ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಓರ್ವ ಉಗ್ರ ಹತನಾಗಿದ್ದಾನೆ ಎನ್ನಲಾಗಿದೆ. ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಭಾರತೀಯ ಸೇನೆ ಈ ರೀತಿ ಪ್ರತ್ಯುತ್ತರ ನೀಡಿದೆ.
ಮೂರು ವಾರದ ಹಿಂದೆ ಆವಂತಿಪೋರಾದಲ್ಲಿ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಕೊಂದು ಹಾಕಲಾಗಿತ್ತು. ಮಾತ್ರವಲ್ಲ, ಕಳೆದ ಕೆಲ ದಿನಗಳ ಹಿಂದೆ ಪಾಕಿಸ್ತಾನ ಆಕ್ರಮಿತ ಪ್ರದೇಶದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿತ್ತು. ತಂಗ್ಧಾರ್ ಸೆಕ್ಟರ್ ಬಳಿಯಿರುವ ಪಾಕ್ ಆಕ್ರಮಿತ ಕಾಶ್ಮೀರದ ನೀಲಂ ಕಣಿವೆಯಲ್ಲಿರುವ ಉಗ್ರರ ತಾಣಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿತ್ತು.