ನವದೆಹಲಿ, ನ.13(Daijiworld News/SS): ಸ್ಪೀಕರ್ ರಮೇಶ್ ಕುಮಾರ್ ಆದೇಶದ ಮೇರೆಗೆ ಅನರ್ಹಗೊಂಡಿರುವ 17 ಶಾಸಕರ ಅನರ್ಹತೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಸದ್ಯ 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿತು.
17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಮುಗಿಯುವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ. ಮಾತ್ರವಲ್ಲ, ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಇಲ್ಲಿ ಆಡಳಿತ, ವಿಪಕ್ಷಗಳ ಕಾರ್ಯವೈಖರಿಯೇ ಬೇರೆ. ಇದೆರಡೂ ಪಕ್ಷಗಳಿಗೂ ನೈತಿಕತೆ ಇರಬೇಕು. ವಿಪಕ್ಷದಲ್ಲಿದ್ದಾಗ ಒಂದು ರೀತಿ ವರ್ತನೆ ಮಾಡುವುದು, ಆಡಳಿತದಲ್ಲಿದ್ದಾಗ ಮತ್ತೊಂದು ರೀತಿ ವರ್ತಿಸುವುದು ವಿಪರ್ಯಾಸವೇ ಸರಿ ಎಂದು ತೀರ್ಪು ನೀಡುವ ವೇಳೆ ನ್ಯಾ.ಎನ್.ವಿ.ರಮಣ್ ಅವರು ಹೇಳಿದರು.