ಬೆಂಗಳೂರು, ನ 13 (Daijiworld News/MSP): ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ನೀಡಬೇಕೋ ಬೇಡವೋ ಎಂಬ ವಿಚಾರವನ್ನು ಪಕ್ಷದ ಮುಖಂಡರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧೆ ಮಾಡಬಹುದು ಎಂಬ ಸುಪ್ರೀಂಕೋರ್ಟ್ ತೀರ್ಪುನ್ನು ಸ್ವಾಗತಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಅವರು ಮಾತನಾಡಿದರು.
" ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಉಪಚುನಾವಣೆಗೆ ದಿನಾಂಕ ಘೋಷಿಸಿರುವ ಹಿನ್ನಲೆಯಲ್ಲಿ ಚುನಾವಣೆಯ ಸಿದ್ಧತೆಗಳ ಕುರಿತು ನಮ್ಮ ಪಕ್ಷದ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದೇವೆ ಹೀಗಾಗಿ ಇಂದು ನಡೆಯಲಿರುವ ಸಭೆಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ಹಂಚಿಕೆ ಕುರಿತು ನಾವು ಮುಖ್ಯಮಂತ್ರಿ ಮತ್ತು ಕೋರ್ ಸಮಿತಿಯೊಂದಿಗೆ ಚರ್ಚಿಸುತ್ತೇವೆ. ಆ ಬಳಿಕ ಟಿಕೆಟ್ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು" ಎಂದು ಹೇಳಿದರು.
ಮಸ್ಕಿ ಮತ್ತು ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಶ್ನಿಸಿ ಸೋತ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ, 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಈ ಕ್ಷೇತ್ರದಲ್ಲಿ ಡಿಸೆಂಬರ್ 5 ರಂದು ಚುನಾವಣೆ ನಡೆಯಲಿದೆ.