ನವದೆಹಲಿ, ನ 13 (Daijiworld News/MB): ಅನರ್ಹ ಶಾಸಕರಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟ ಮಾಡಿದ ಬೆನ್ನಲ್ಲೇ ಎಲ್ಲಾ 17 ಅನರ್ಹ ಶಾಸಕರು ನವೆಂಬರ್ 14ರಂದು ಬಿಜೆಪಿ ಸೇರಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ‘ಅನರ್ಹ ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿಸುತ್ತಿರುವ ಹಿನ್ನಲೆಯಲ್ಲಿ ನಮ್ಮ ನಮ್ಮ ಪಕ್ಷದ ಹಿರಿಯ ನಾಯಕರನ್ನು ಈಗಾಗಲೇ ಭೇಟಿ ಮಾಡಿ ಮಾತಾನಾಡಿದ್ದಾರೆ. ಅವರನ್ನು ನಾಳೆ ಬೆಳಿಗ್ಗೆ 10.30 ಗಂಟೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ’ ಎಂದು ಹೇಳಿದರು.
ಅಶ್ವತ್ಥ ನಾರಾಯಣ ಅವರು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಗೊಂಡ ನಂತರ ಅನರ್ಹ ಶಾಸಕರೊಂದಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿ ಮಾಡಿದ್ದು ಬಳಿಕ ಮಾತನಾಡಿದ ಅವರು, ‘ಪಕ್ಷದ ನಾಯಕರು, ಅನರ್ಹ ಶಾಸಕರು ನಾಳೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತಿದ್ದು, ಮುಂದಿನ ನಡೆ ಬಗ್ಗೆ ಚರ್ಚಿಸಲಿದ್ದೇವೆ. ಡಿಸೆಂಬರ್ 5ರಂದು ನಡೆಯುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ’ಎಂದರು.