ಬೆಂಗಳೂರು, ನ 13 (DaijiworldNews/SM): ಬುಧವಾರದಂದು ಅನರ್ಹರ ಕುರಿತ ತೀರ್ಪು ಹೊರ ಬಿದ್ದಿದ್ದು ಎಲ್ಲಾ ಅನರ್ಹ ಶಾಸಕರು ಗುರುವಾರದಂದು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಇಂದು ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸುಪ್ರೀಂ ಕೋರ್ಟ್ ತೀರ್ಪು ಬಳಿಕ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಅನರ್ಹ ಶಾಸಕರು ಮಾತುಕತೆ ನಡೆಸಿದ್ದಾರೆ. ಗುರುವಾರದಂದು ಅವರೆಲ್ಲರೂ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳಿಸಲಿದ್ದಾರೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು. ಅನರ್ಹರ ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆಸಿದ್ದು, ಬೆಳಗ್ಗೆ 10 ಗಂಟೆಗೆ ಅನರ್ಹರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.