ನವದೆಹಲಿ, ನ.14(Daijiworld News/SS): ರಫೇಲ್ ಡೀಲ್ ಸಂಬಂಧ ಮೋದಿ ಸರ್ಕಾರಕ್ಕೆ ಕ್ಲೀನ್ಚಿಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ.
ಕೇಂದ್ರದ ಮಾಜಿ ಸಚಿವರಾದ ಯಶ್ವಂತ್ ಸಿನ್ಹಾ, ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಗಳ ಸಂಬಂಧ ತೀರ್ಪು ಹೊರಬೀಳಲಿದೆ. ಇದೇ ವರ್ಷದ ಮೇ 10 ರಂದು ವಿಚಾರಣೆ ಮುಗಿಸಿದ್ದ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.
ಜೊತೆಗೆ, ರಾಹುಲ್ ಗಾಂಧಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ತೀರ್ಪು ಕೂಡ ಹೊರಬೀಳುವ ಸಂಭವ ಇದೆ. ಮಾತ್ರವಲ್ಲ, ಶಬರಿಮಲೆ ವಿವಾದದ ಮಹತ್ವದ ತೀರ್ಪು ಕೂಡ ಇಂದೇ ಹೊರಬೀಳಲಿದೆ.
ಈ ಹಿಂದೆ ಬಹುಕೋಟಿ ರಫೇಲ್ ಯುದ್ಧ ವಿಮಾನ ಖರೀದಿ ಹಗರಣದ ಸಂಬಂಧ ತನಿಖೆಗೆ ಆದೇಶ ನೀಡಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಈ ಮೂಲಕ ಪ್ರಧಾನಿ ಮೋದಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕಾಂಗ್ರೆಸ್ಸಿಗೆ ಭಾರೀ ಮುಖಭಂಗವಾಗಿತ್ತು. ಇಂದು ಮತ್ತೆ ಮೋದಿ ಸರ್ಕಾರಕ್ಕೆ ಕ್ಲೀನ್ಚಿಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಲಿದೆ.