ನವದೆಹಲಿ, ನ.14(Daijiworld News/SS): ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ 2018ರ ಸೆಪ್ಟಂಬರ್ 28ರಂದು ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿ ಕುರಿತು ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ಗುರುವಾರ ಅಂಗೀಕರಿಸಿದ್ದು, ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಆದೇಶ ನೀಡಿದೆ.
2018 ರ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ಈ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಒಟ್ಟು 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅವೆಲ್ಲವುಗಳ ವಿಚಾರಣೆಯನ್ನು ಕೋರ್ಟು ಮುಗಿಸಿದ್ದು, ಇಂದು ತೀರ್ಪು ಪ್ರಕಟಿಸಬೇಕಿತ್ತು.
ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ಅವರು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ಸಲ್ಲಿಕೆಯಾದ ಮರುಪರಿಶೀಲನೆ ಮೇಲ್ಮನವಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. 3-2 ಬಹುಮತದಿಂದ ಪಂಚಸದಸ್ಯ ಪೀಠ ಪೂರ್ಣಪೀಠಕ್ಕೆ ನೀಡಿದೆ.