ಬೆಂಗಳೂರು, ನ.14(Daijiworld News/SS): ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳದೇ, ಎಲ್ಲಾ ಕ್ಷೇತ್ರಗಳಲ್ಲಿಯೂ ನಾವು ಸ್ಪರ್ಧಿಸಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿದ ಬಳಿಕ ಸುದ್ದಿಗೋಷ್ಠಿ ಮಾತನಾಡಿದ ಅವರು, ಬಿಜೆಪಿಗೆ ನಾವು ಶರಣಾಗಿಲ್ಲ. ನಾವು ಯಾವುದೇ ಪಕ್ಷದೊಂದಿಗೆ ರಾಜಿ ಶರಣಾಗುವ ಪ್ರಶ್ನೆ ಇಲ್ಲ. ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳದೇ, ಎಲ್ಲಾ ಕ್ಷೇತ್ರಗಳಲ್ಲಿಯೂ ನಾವು ಸ್ಪರ್ಧಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಬಂದ ನಂತರ ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟ ಪ್ರಕಟಿಸಿದೆ. ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದ್ದು, ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಯಲ್ಲಿ 15ರಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಸುಪ್ರೀಂ ಕೋರ್ಟ್ ತೀರ್ಪಿಗಾಗಿ ಕಾದು ಕುಳಿತಿದ್ದ ಜೆಡಿಎಸ್, ತೀರ್ಪಿನ ಬಳಿಕ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡಗೆ ಬೆಂಬಲಿಸಲಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ನಾಳೆ ಘೋಷಿಸುವುದಾಗಿ ತಿಳಿಸಿದೆ.