ಬೆಂಗಳೂರು, ನ 05 (DaijiworldNews/SM): ಮೈತ್ರಿ ಸರಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಸರಕಾರದ ವಿರುದ್ಧ ಸಿಡಿದೆದ್ದು, ಹೊರ ನಡೆದಿದ್ದ ರೋಷನ್ ಬೇಗ್ ಗೆ ಇದೀಗ ಬಿಜೆಪಿಯಿಂದಲೂ ನಿರಾಸೆಯುಂಟಗಿದೆ. ಬೈ ಎಲೆಕ್ಷನ್ ನಲ್ಲಿ ತಮಗೆ ಬಿಜೆಪಿ ಟಿಕೆಟ್ ನೀಡುತ್ತದೆ ಎಂದು ಕೊಂಡಿದ್ದ ಬೇಗ್ ಗೆ ಕೊನೇ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿದೆ. ಈ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳಿಯಲು ಬೇಗ್ ಮುಂದಾಗಿದ್ದಾರೆ.
ಉಪ ಚುನಾವಣೆಯಲ್ಲಿ ಶಿವಾಜಿ ನಗರ ಕ್ಷೇತ್ರದಿಂದ ಅನರ್ಹ ಶಾಸಕ ರೋಷನ್ ಬೇಗ್ ಬದಲು ಬಿಬಿಎಂಪಿ ಮಾಜಿ ಸದಸ್ಯ ಶರವಣ ಅವರಿಗೆ ನೀಡಿದೆ. ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹೆಸರು ಕೇಳಿ ಬಂದಿತ್ತು. ಇದುವೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಆರ್ ಎಸ್ ಎಸ್ ಬೇಗ್ ಗೆ ಟಿಕೆಟ್ ನೀಡಲು ನಿರಾಕರಿಸಿದೆ ಎನ್ನುವ ವಿಚಾರ ತಿಳಿದುಬಂದಿದೆ.
ಇಂದು ಬೆಳಗ್ಗೆ ಬಿಜೆಪಿ ಬಿಡುಗಡೆ ಮಾಡಿದ 13 ಕ್ಷೇತ್ರಗಳ ಪಟ್ಟಿಯಲ್ಲಿ ಶಿವಾಜಿನಗರದ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಆದರೆ ನಂತರ ಬಿಡುಗಡೆಯಾದ ಎರಡನೇ ಪಟ್ಟಿಯಲ್ಲಿ ಶರವಣ ಅವರ ಹೆಸರನ್ನು ಘೋಷಿಸಿದೆ. ಶರವಣ ಅವರು ಹಲಸೂರು ವಾರ್ಡ್ ಪಾಲಿಕೆ ಸದಸ್ಯೆ ಮಮತಾ ಅವರ ಪತಿಯಾಗಿದ್ದಾರೆ.
ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಬೇಗ್ ಬಂಡಾಯವಾಗಿ ಇವರ ವಿರುದ್ಧ ಪಕ್ಷೇತರರಾಗಿ ಸ್ಪರ್ಧೆಗೆ ಇಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.